Skip to content
Billava News

ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಹರೀಶ್ ಕೋಟ್ಯಾನ್ ಉಳ್ಳೂರು ಆಯ್ಕೆ

21 ವರ್ಷಗಳ ಬೋಧನಾ ಸೇವೆ; ಶಿಕ್ಷಣ, ಕಲೆ ಹಾಗೂ ರಂಗಭೂಮಿ ಕ್ಷೇತ್ರದಲ್ಲೂ ಸಕ್ರಿಯ ಸಾಧನೆ..

By Billavavani
ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಹರೀಶ್ ಕೋಟ್ಯಾನ್ ಉಳ್ಳೂರು ಆಯ್ಕೆ

ಉಡುಪಿ: ಉಡುಪಿ ಆದರ್ಶ ಚಾರಿಟೇಬಲ್ ಟ್ರಸ್ಟ್, ಆದರ್ಶ ಸಮೂಹ ಸಂಸ್ಥೆಗಳು, ಆದರ್ಶ ಆಸ್ಪತ್ರೆ ಹಾಗೂ ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಡಾ. ಎಸ್. ರಾಧಾಕೃಷ್ಣನ್ ಅವರ ಜನ್ಮಜಯಂತಿ ಅಂಗವಾಗಿ ನೀಡಲಾಗುವ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಬೈಂದೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕ ಶ್ರೀ ಹರೀಶ್ ಕೋಟ್ಯಾನ್ ಉಳ್ಳೂರು ಅವರು ಭಾಜನರಾಗಿದ್ದಾರೆ.

ಕಳೆದ 21 ವರ್ಷಗಳಿಂದ ಜೀವಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಹರೀಶ್ ಕೋಟ್ಯಾನ್ ಅವರು ಶಿಕ್ಷಣ ಕ್ಷೇತ್ರದ ಜೊತೆಗೆ ಕಲೆ ಹಾಗೂ ರಂಗಭೂಮಿ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಆಸಕ್ತಿ ಮೂಡಿಸುವಲ್ಲಿ ಅವರು ಗಮನಾರ್ಹ ಕೊಡುಗೆ ನೀಡಿದ್ದಾರೆ.

ಹರೀಶ್ ಕೋಟ್ಯಾನ್ ಅವರು ಯುವವಾಹಿನಿ ಪಡುಬಿದ್ರಿ ಘಟಕದ ಕಲೆ ಮತ್ತು ಸಾಹಿತ್ಯ ನಿರ್ದೇಶಕರಾಗಿದ್ದು, ವಿವಿಧ ಸಾಂಸ್ಕೃತಿಕ ಹಾಗೂ ಕಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ನಡೆದ ಯುವವಾಹಿನಿ ಡೆನ್ನಾನಾ ಡೆನ್ನನ 2026 ಕಾರ್ಯಕ್ರಮದಲ್ಲಿ ಅತ್ಯುತ್ತಮ ನಟ ಪ್ರಶಸ್ತಿಗೂ ಅವರು ಪುರಸ್ಕೃತರಾಗಿದ್ದಾರೆ.

ಶಿಕ್ಷಣ, ಕಲೆ ಮತ್ತು ರಂಗಭೂಮಿ ಕ್ಷೇತ್ರಗಳಲ್ಲಿ ಸಮಾನ ಆಸಕ್ತಿಯಿಂದ ಸೇವೆ ಸಲ್ಲಿಸುತ್ತಿರುವ ಹರೀಶ್ ಕೋಟ್ಯಾನ್ ಅವರ ಸಾಧನೆಯನ್ನು ಗುರುತಿಸಿ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಅವರ ಸಹೋದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಕಲಾಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

ಪ್ರಶಸ್ತಿ ಪ್ರಧಾನ ಸಮಾರಂಭವು ಸೆಪ್ಟೆಂಬರ್ 6ರಂದು ಉಡುಪಿಯ ಅಲೆವೂರಿನ ಆದರ್ಶ ಸಮೂಹ ವಿದ್ಯಾಸಂಸ್ಥೆಗಳ ಸಂಕೀರ್ಣದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ.