ಕ್ರೀಡಾಪಟುಗಳಿಗೆ ಶೇ.2ರಷ್ಟು ಮೀಸಲಾತಿ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ರಾಜ್ಯದ ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಹಾಗೂ ಕ್ರೀಡಾಪಟುಗಳ ಭವಿಷ್ಯವನ್ನು ಭದ್ರಪಡಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.

ಬೆಂಗಳೂರು: ರಾಜ್ಯದ ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಹಾಗೂ ಕ್ರೀಡಾಪಟುಗಳ ಭವಿಷ್ಯವನ್ನು ಭದ್ರಪಡಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಸಿವಿಲ್ ಸೇವೆಗಳ ಎಲ್ಲಾ ನೇರ ನೇಮಕಾತಿಗಳಲ್ಲಿ ಅರ್ಹ ಕ್ರೀಡಾ ಸಾಧಕರಿಗೆ ಶೇ.2ರಷ್ಟು ಮೀಸಲಾತಿ ಕಲ್ಪಿಸಿ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ರಾಜ್ಯದ ವಿವಿಧ ಕ್ರೀಡಾ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವುದು ಈ ಕ್ರಮದ ಉದ್ದೇಶವಾಗಿದೆ. ಇದರಿಂದ ಕ್ರೀಡಾಪಟುಗಳು ತಮ್ಮ ಕ್ರೀಡಾ ಸಾಧನೆಯೊಂದಿಗೆ ಉತ್ತಮ ಹಾಗೂ ಭದ್ರ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ.
ಕ್ರೀಡಾಪಟುಗಳ ಪರಿಶ್ರಮ, ಪ್ರತಿಭೆ ಮತ್ತು ಸಾಧನೆಯನ್ನು ಗುರುತಿಸುವ ಈ ನಿರ್ಧಾರವು ರಾಜ್ಯದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಮತ್ತಷ್ಟು ಉತ್ತೇಜನ ನೀಡುವ ನಿರೀಕ್ಷೆಯಿದೆ. ಯುವಜನರು ಕ್ರೀಡೆಯತ್ತ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಲು ಹಾಗೂ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಹೆಚ್ಚಿಸಲು ಈ ಮೀಸಲಾತಿ ಪ್ರೋತ್ಸಾಹ ನೀಡಲಿದೆ.
ರಾಜ್ಯದ ಕ್ರೀಡಾಪಟುಗಳ ಸಾಧನೆಗೆ ಬೆನ್ನೆಲುಬಾಗಿ ನಿಲ್ಲುವ ಹಾಗೂ ಮುಂದಿನ ಪೀಳಿಗೆಯ ಕ್ರೀಡಾ ಪ್ರತಿಭೆಗಳನ್ನು ಬೆಳೆಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದೆ.
