ಉಡುಪಿ ಜಿಲ್ಲೆಯಲ್ಲಿ ಗಣೇಶೋತ್ಸವ ಹಿನ್ನೆಲೆ ಮದ್ಯ ಮಾರಾಟಕ್ಕೆ ತಾತ್ಕಾಲಿಕ ನಿಷೇಧ
ಗಣೇಶೋತ್ಸವ ಹಾಗೂ ಗಣೇಶ ವಿಗ್ರಹ ವಿಸರ್ಜನೆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಅವರು ಮದ್ಯ ಮಾರಾಟ ನಿಷೇಧಿಸುವಂತೆ ಆದೇಶ ಹೊರಡಿಸಿದ್ದಾರೆ.

ಗಣೇಶೋತ್ಸವ ಹಾಗೂ ಗಣೇಶ ವಿಗ್ರಹ ವಿಸರ್ಜನೆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಅವರು ಮದ್ಯ ಮಾರಾಟ ನಿಷೇಧಿಸುವಂತೆ ಆದೇಶ ಹೊರಡಿಸಿದ್ದಾರೆ.
ಆದೇಶದ ಪ್ರಕಾರ, ಸೆಪ್ಟೆಂಬರ್ 14ರಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಸಂಪೂರ್ಣವಾಗಿ ನಿಷೇಧಿಸಲಾಗುತ್ತದೆ. ಇದೇ ರೀತಿ, ಸೆಪ್ಟೆಂಬರ್ 16ರಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಉಡುಪಿ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.
ಅಲ್ಲದೆ, ಸೆಪ್ಟೆಂಬರ್ 18ರಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಗಣೇಶ ವಿಸರ್ಜನೆ ನಡೆಯುವ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿಯೂ ಮದ್ಯ ಮಾರಾಟ ನಿಷೇಧ ಜಾರಿಯಲ್ಲಿರಲಿದೆ. ಗಂಗೊಳ್ಳಿ, ಕುಂದಾಪುರ ನಗರ ಹಾಗೂ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಕೆಲವು ನಿರ್ದಿಷ್ಟ ಗ್ರಾಮಗಳಲ್ಲಿಯೂ ಈ ಆದೇಶ ಅನ್ವಯವಾಗಲಿದೆ.
ಗಣೇಶೋತ್ಸವದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ಆದೇಶ ಜಾರಿಗೊಳಿಸಲಾಗಿದೆ. ನಿಷೇಧಿತ ಅವಧಿಯಲ್ಲಿ ಜಿಲ್ಲೆಯ ಮದ್ಯದಂಗಡಿಗಳು, ಬಾರ್‌ಗಳು ಹಾಗೂ ಮದ್ಯ ಮಾರಾಟ ಮಾಡುವ ಇತರೆ ಪರವಾನಗಿ ಹೊಂದಿರುವ ಕೇಂದ್ರಗಳಲ್ಲಿ ಮದ್ಯ ಮಾರಾಟ ಮಾಡದಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.