ಶಿಕ್ಷಣದ ಜತೆಗೆ ಕ್ರೀಡೆಗೂ ಸಮಾನ ಆದ್ಯತೆ ನೀಡುವ ಅಗತ್ಯ: ಸಚಿವ ಮಧು ಬಂಗಾರಪ್ಪ
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಶೇಷಾದ್ರಿಪುರಂ ಸಂಯುಕ್ತ ಪದವಿ ಪೂರ್ವ ಕಾಲೇಜು, ಆರ್. ಗುಂಡೂರಾವ್ ಫೌಂಡೇಷನ್ ಹಾಗೂ ಗೋಲ್ಡನ್ ಬಾಯ್ಸ್ ವಾಲಿಬಾಲ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ 2026-27ನೇ ಸಾಲಿನ ಪದವಿ...

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಶೇಷಾದ್ರಿಪುರಂ ಸಂಯುಕ್ತ ಪದವಿ ಪೂರ್ವ ಕಾಲೇಜು, ಆರ್. ಗುಂಡೂರಾವ್ ಫೌಂಡೇಷನ್ ಹಾಗೂ ಗೋಲ್ಡನ್ ಬಾಯ್ಸ್ ವಾಲಿಬಾಲ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ 2026-27ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿ ಬೆಂಗಳೂರಿನ ಆರ್. ಗುಂಡೂರಾವ್ ಕ್ರೀಡಾ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ, ಕ್ರೀಡಾ ಚಟುವಟಿಕೆಗಳಿಗೆ ಅಗತ್ಯವಿರುವ ಎಲ್ಲ ರೀತಿಯ ಪ್ರೋತ್ಸಾಹ ಮತ್ತು ಸಹಕಾರ ನೀಡಲು ಸಿದ್ಧವಿರುವುದಾಗಿ ತಿಳಿಸಿದರು. ಶಿಕ್ಷಣದ ಜತೆಗೆ ಕ್ರೀಡೆಗೂ ಸಮಾನ ಆದ್ಯತೆ ನೀಡುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ತಮ್ಮ ಇಲಾಖೆಯ ವ್ಯಾಪ್ತಿಯ ಶಾಲಾ ಮತ್ತು ಕಾಲೇಜುಗಳಲ್ಲಿ ಕ್ರೀಡೆಗೆ ಉತ್ತೇಜನ ನೀಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವರಾದ ದಿನೇಶ್ ಗುಂಡೂರಾವ್ ಮಾತನಾಡಿ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯವಿದೆ. ಕ್ರೀಡೆಯು ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು.

ಶ್ರೀ ಆದಿಚುಂಚನಗಿರಿ ಮಠದ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಡೋಜ ಡಾ. ವೂಡೇ ಪಿ. ಕೃಷ್ಣ, ಗಾಂಧಿನಗರ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮೇಶ್ ಬಾಬು, ಅಂತಾರಾಷ್ಟ್ರೀಯ ವಾಲಿಬಾಲ್ ಆಟಗಾರ ವಿನಾಯಕ ರೋಕರೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
