ಪ್ರದೀಪ್ ಪೂಜಾರಿ ಪ್ರಕರಣ: ಪೊಲೀಸ್ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ; ಪಿಎಸ್‌ಐ ವರ್ಗಾವಣೆ, ಇಬ್ಬರು ಸಿಬ್ಬಂದಿ ಅಮಾನತು
ಉಡುಪಿ, ನ. 6: ಹಿರಿಯಡ್ಕದ ಪ್ರದೀಪ್ ಪೂಜಾರಿ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದ ತನಿಖೆ ಮತ್ತು ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಹಿನ್ನೆಲೆಯಲ್ಲಿ...

ಉಡುಪಿ, ನ. 6: ಹಿರಿಯಡ್ಕದ ಪ್ರದೀಪ್ ಪೂಜಾರಿ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದ ತನಿಖೆ ಮತ್ತು ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಅವರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಸಲ್ಲಿಸಿದ ವಿಚಾರಣಾ ವರದಿಯನ್ನು ಪಶ್ಚಿಮ ವಲಯದ ಡಿಐಜಿಯವರಿಗೆ ರವಾನಿಸಲಾಗಿದೆ. ಇದರ ಆಧಾರದ ಮೇಲೆ ಹಿರಿಯಡ್ಕ ಪೊಲೀಸ್ ಠಾಣೆಯ ಪಿಎಸ್‌ಐ ಅವರನ್ನು ಪಶ್ಚಿಮ ವಲಯದ ಡಿಐಜಿ ಕಚೇರಿಗೆ ಲಗತ್ತಿಸಲಾಗಿದ್ದು, ಅವರ ವಿರುದ್ಧ ಇಲಾಖಾ ಶಿಸ್ತು ಕ್ರಮ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.
ಇನ್ನೊಂದು ಬೆಳವಣಿಗೆಯಲ್ಲಿ, ಆಸ್ಪತ್ರೆಯಲ್ಲಿ ಭದ್ರತಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ. ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಸಲ್ಲಿಸಿದ ವಿಚಾರಣಾ ವರದಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.
ಅಮಾನತುಗೊಂಡಿರುವ ಇಬ್ಬರು ಸಿಬ್ಬಂದಿ ವಿರುದ್ಧವೂ ಇಲಾಖಾ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ಹರಿರಾಮ್ ಶಂಕರ್ ಸ್ಪಷ್ಟಪಡಿಸಿದ್ದಾರೆ.
