ಯುವವಾಹಿನಿ (ರಿ.) ಕೊಲ್ಯ ಘಟಕ: ಶಾಲಾ ಮಕ್ಕಳಿಗೆ ಮೊಬೈಲ್ ಹಾಗೂ ಡ್ರಗ್ಸ್ ಅಡಿಕ್ಷನ್ ಕುರಿತು ಮಾಹಿತಿ ಶಿಬಿರ
ಯುವವಾಹಿನಿ (ರಿ.) ಕೊಲ್ಯ ಘಟಕ: ಶಾಲಾ ಮಕ್ಕಳಿಗೆ ಮೊಬೈಲ್ ಹಾಗೂ ಡ್ರಗ್ಸ್ ಅಡಿಕ್ಷನ್ ಕುರಿತು ಮಾಹಿತಿ ಶಿಬಿರ

ಯುವವಾಹಿನಿ (ರಿ.) ಕೊಲ್ಯ ಘಟಕ ಹಾಗೂ ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲ ಇವರ ಸಹಯೋಗದಲ್ಲಿ ಪಿಎಂ ಶ್ರೀ ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ಒಂಬತ್ತುಕೆರೆ, ಉಳ್ಳಾಲ ಇಲ್ಲಿನ ಶಾಲಾ ಮಕ್ಕಳಿಗಾಗಿ ಮೊಬೈಲ್ ಅಡಿಕ್ಷನ್ ಹಾಗೂ ಡ್ರಗ್ಸ್ ಅಡಿಕ್ಷನ್ ಕುರಿತು ಮಾಹಿತಿ ಶಿಬಿರ ಸೆಪ್ಟೆಂಬರ್ 16ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಯುವವಾಹಿನಿ (ರಿ.) ಕೊಲ್ಯ ಘಟಕದ ಅಧ್ಯಕ್ಷ ಜೀವನ್ ಕೊಲ್ಯ, ಇಂದಿನ ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಬಳಕೆ ಹಾಗೂ ಮಾದಕ ವ್ಯಸನದಂತಹ ಸಮಸ್ಯೆಗಳ ಕುರಿತು ಅರಿವು ಮೂಡಿಸುವ ಅಗತ್ಯವನ್ನು ವಿವರಿಸಿದರು. ವಿದ್ಯಾರ್ಥಿಗಳು ಮೊಬೈಲ್ ಬಳಸುವ ಸಂದರ್ಭದಲ್ಲಿ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಮಾಹಿತಿ ನೀಡಿದರು.

ಯುವವಾಹಿನಿ ಕೇಂದ್ರ ಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕಿ ಹಾಗೂ ಸಂಪನ್ಮೂಲ ವ್ಯಕ್ತಿ ಸುಧಾ ಸುರೇಶ್, ವಿದ್ಯಾರ್ಥಿಗಳು ತಂದೆ-ತಾಯಿ ಹಾಗೂ ಗುರುಹಿರಿಯರಿಗೆ ಗೌರವ ನೀಡುವ ಜೊತೆಗೆ ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಜವಾಬ್ದಾರಿಯುತ ನಾಗರಿಕರಾಗಿ ಬೆಳೆದು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿ ಡಾ. ಅಪೂರ್ವ ಕೆಂಜಾರ್, ಅತಿಯಾದ ಮೊಬೈಲ್ ಬಳಕೆಯಿಂದ ದೇಹ ಹಾಗೂ ಮನಸ್ಸಿನ ಮೇಲೆ ಉಂಟಾಗಬಹುದಾದ ದುಷ್ಪರಿಣಾಮಗಳ ಕುರಿತು ವಿವರಿಸಿದರು. ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ದೂರವಿದ್ದು ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಸೇರಿದಂತೆ ವಿವಿಧ ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಅಗತ್ಯವನ್ನು ತಿಳಿಸಿದರು. ಡ್ರಗ್ಸ್ ಬಳಕೆಯಿಂದಾಗುವ ದುಷ್ಪರಿಣಾಮಗಳು ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳು ವಹಿಸಬಹುದಾದ ಪಾತ್ರದ ಬಗ್ಗೆಯೂ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಂಪನ್ಮೂಲ ವ್ಯಕ್ತಿಗಳೊಂದಿಗೆ ಮುಕ್ತವಾಗಿ ಸಂವಾದ ನಡೆಸಿ, ವಿವಿಧ ವಿಷಯಗಳ ಕುರಿತು ತಮ್ಮಲ್ಲಿದ್ದ ಸಂಶಯಗಳನ್ನು ನಿವಾರಿಸಿಕೊಂಡರು. ಶಾಲೆಯ ಶಿಕ್ಷಕ ವರ್ಗ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳಿಗೆ ಮೊಬೈಲ್ ಹಾಗೂ ಮಾದಕ ವ್ಯಸನದಿಂದ ದೇಹ ಮತ್ತು ಮನಸ್ಸಿನ ಮೇಲೆ ಉಂಟಾಗಬಹುದಾದ ದುಷ್ಪರಿಣಾಮಗಳ ಕುರಿತು ಪರಿಣಾಮಕಾರಿಯಾಗಿ ಅರಿವು ಮೂಡಿಸುವಲ್ಲಿ ಕಾರ್ಯಕ್ರಮ ಯಶಸ್ವಿಯಾಯಿತು. ಒಟ್ಟು 72 ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಕೊಲ್ಯ ಘಟಕದ ಸ್ಥಾಪಕ ಅಧ್ಯಕ್ಷ ಸುರೇಶ್ ಬಿಲ್ಲವ ಸೇರಿದಂತೆ ಶಾಲೆಯ ಶಿಕ್ಷಕಿಯರು ಉಪಸ್ಥಿತರಿದ್ದರು.
